ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜು ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 15ರಿಂದ 18ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆಯನ್ನು ಕ್ಯಾಂಪಸ್ನ ವೀರಸಾಗರ ವಸತಿ ನಿಲಯ ಸಭಾಂಗಣದಲ್ಲಿ ಬುಧವಾರ ನೀಡಲಾಯಿತು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ, ವಕೀಲ ಬಾಹುಬಲಿ ಪ್ರಸಾದ್ ಶಿಬಿರವನ್ನು ಉದ್ಘಾಟಿಸಿ, ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶೇ.99 ಲಸಿಕೆಯನ್ನು ನೀಡಲಾಗಿದ್ದು, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ವಾತಾವರಣ ಉತ್ತಮವಾಗಿದ್ದು, ಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿವಹಿಸುತ್ತಿರುವುದು ಶ್ಲಾಘನೀಯ ಎಂದರು.
ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆವಹಿಸಿದರು. ಮೂಡುಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಧರ್,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ, ಆರೋಗ್ಯ ಕೇಂದ್ರದ ಸಿಬ್ಬಂದಿ ಗಿರಿಜಾ ಮುಖ್ಯ ಅತಿಥಿಗಳಾಗಿದ್ದರು. ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.
ವಿಕ್ರಂ ನಾಯಕ್ ಕೆ. ಕಾರ್ಯಕ್ರಮ ನಿರೂಪಿಸಿದರು.1,111 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.